Thursday, November 2, 2023

ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ: ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

ಹೊಸಪೇಟೆ, ನವೆಂಬರ್ 2 :  ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌

ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಗಣಿಗಾರಿಕೆಗೆ ಸಂಬಂಧಿಸಿದ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ವರ್ಗದ ಗಣಿಗಾರಿಕೆ ಕಾನೂನುಬದ್ಧವಾಗಿ ಪರವನಾಗಿ ತೆಗೆದುಕೊಂಡಲ್ಲಿ, ಎಲ್ಲ ಸಂಬಂಧಪಟ್ಟ ಇಲಾಖೆಗಳಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದರು. 

ಅರಣ್ಯ ಇಲಾಖೆಯೊಂದಿಗೆ ಈ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಎ,ಬಿ, ಸಿ  ಅಥವಾ ಯಾವುದೇ ವರ್ಗದ ಗಣಿಗಾರಿಕೆಗೆ ತೊಂದರೆ ನೀಡದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ.  ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಪರ್ಯಾಯ ಕ್ರಮಗಳ ಬಗ್ಗೆಯೂ ತಿಳಿಸಲಾಗಿದೆ. ನಾವು ಹಿಂದೆ ಅಕ್ರಮ ಗಣಿಗಾರಿಕೆ ಬಗ್ಗೆ ಹೋರಾಟ ನಡೆಸಿದ್ದೆವು. ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಮಹಿಳಾ ಪದವಿ ಕಾಲೇಜು ಮತ್ತು ಮಹಿಳಾ ಪೊಲೀಸ್ ಠಾಣೆ-ಪರಿಶೀಲಿಸಿ ಕ್ರಮ:

ಹೊಸಪೇಟೆಯ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಗ್ರಂಥಾಲಯ ಕಟ್ಟಡಗಳು ಸೇರಿದಂತೆ ಒಟ್ಟು 36 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ. ಸುಸಜ್ಜಿತ ವ್ಯವಸ್ಥೆಗಳುಳ್ಳ ಈ ಕಟ್ಟಡಗಳಿಂದ ಸುಮಾರು 3 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ಕಾಮಗಾರಿಯನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗಿದೆ ಎಂದರು. ವಿಜಯನಗರ ಜಿಲ್ಲೆಗೆ ಮಹಿಳಾ ಪದವಿ ಕಾಲೇಜು ಹಾಗೂ ಮಹಿಳಾ ಪೊಲೀಸ್ ಠಾಣೆಯ ಅವಶ್ಯಕತೆಯಿರುವ ಬಗ್ಗೆ ಮಾಧ್ಯಮದವರು ತಿಳಿಸಿದ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡುತ್ತಾ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಪತನಗೊಳಿಸುವ ಬಿಜೆಪಿಯವರ ವ್ಯರ್ಥ ಪ್ರಯತ್ನ:

ಶಾಸಕ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ 136  ಸ್ಥಾನ ಗೆಲ್ಲಿಸಿ ಬಹುಮತ ನೀಡಿದ್ದಾರೆ. ಐದು ವರ್ಷ ಕಾಂಗ್ರೆಸ್ ಸರ್ಕಾರವೇ ಆಡಳಿತ ಇರುತ್ತದೆ. ನಾನೇ ಐದುವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಒಮ್ಮೆ ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಯಶಸ್ವಿಯಾಗಿದ್ದರಿಂದ, ಈಗ ಮತ್ತೆ ಆ ಪ್ರಯತ್ನಕ್ಕೆ ಕೈಹಾಕಬಹುದು ಎಂದುಕೊಂಡಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಲಿದೆ ಎಂದರು.

ಹೈಕಮಾಂಡ್ ನಿರ್ಧಾರ :

ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಹಂಪಿ ಉತ್ಸವ:

ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಕಳೆದ ಸಾಲಿನಲ್ಲಿ ಜನವರಿ ಮಾಹೆಯಲ್ಲಿ ಹಂಪಿ ಉತ್ಸವ ಆಚರಿಸಲಾಗಿದ್ದಂತೆ , ಈ ಸಾಲಿನಲ್ಲಿಯೂ ಜನವರಿ ಮಾಹೆಯಲ್ಲಿ ಆಚರಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆ :

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ:

ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆಯಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿ, ಹಂಪಿ ವಿಶ್ವವಿದ್ಯಾಲಯವು ಅನುದಾನ ಕೋರಿದ ಮೇರೆಗೆ ಅನುದಾನವನ್ನು ಕೂಡಲೇ ಒದಗಿಸಲಾಗುವುದು ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

03-11-2023 EE DIVASA KANNADA DAILY NEWS PAPER