Thursday, January 25, 2024

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಲಿಂಗ ತಾರತಮ್ಯ ಭಾವನೆ ತೊಡೆದು ಹಾಕಿ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ


ವಿಜಯಪುರ : ಗಂಡು-ಹೆಣ್ಣು ಎಂಬ ಬೇಧಭಾವ ಮಾಡದೇ ಇಬ್ಬರೂ ಸರಿಸಮಾನರು ಎಂಬ ಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ ಯೋಜನೆಯಡಿ ಹಮ್ಮಿಕೊಂಡ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಸಮಾಜದಲ್ಲಿನ ಲಿಂಗ ತಾರತಮ್ಯ ಹೋಗಲಾಡಿಸಲು ಪ್ರತಿಯೊಬ್ಬರು ಗಂಡು-ಹೆಣ್ಣು ಎಂಬ ಬೇಧ ಭಾವಕ್ಕೆ ಅಂತ್ಯ ಹಾಡಬೇಕು. ಇಬ್ಬರೂ ಸರಿಸಮಾನರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ, ಬಾಲ್ಯ ವಿವಾಹ, ವರದಕ್ಷಿಣೆಯಂತಹ ಸಾಮಾಜಿಕ ಪಿಡುಗಳನ್ನು ತೊಡೆದು ಹಾಕಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಹೇಳಿದರು. 


ಹೆಣ್ಣು ಮಗುವಿಗೆ ರಕ್ಷಣೆ ಮತ್ತು ಧೈರ್ಯ ತುಂಬಬೇಕು. ಹೆಣ್ಣು ಮಗುವಿನ ಜನನದಿಂದ ಗೌರವಪಡುವ ಮನೋಭಾವನೆ ಬೆಳೆಸಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೆಣ್ಣಾಗಲಿ, ಗಂಡಾಗಲಿ ಶಿಕ್ಷಣಕ್ಕೆ ಆದ್ಯತೆ ನೀಡಿ, ಸಮಾಜ, ದೇಶಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಮಹದೆತ್ತರಕ್ಕೆ ಬೆಳೆಸಬೇಕು ಎಂದು ಅವರು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಅವರು ಮಾತನಾಡಿ, ಹೆಣ್ಣು ಮಗುವಿನ ಉಜ್ವಲ ಭವಿಷ್ಯ ರೂಪಿಸುವುದು ಪೋಷಕರ ಕರ್ತವ್ಯವಾಗಿದೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಹೆಣ್ಣು ಹೊರೆ ಎಂಬ ಭಾವನೆ ತೊಡೆದು ಹಾಕಬೇಕು. ಬಾಲ್ಯವಿವಾಹ ಪದ್ಧತಿ ಕಾನೂನು ಬಾಹಿರವಾಗಿದ್ದು, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಕುರಿತು ಪಾಲಕರು ಜಾಗೃತಿ ಹೊಂದಿ ಬಾಲ್ಯ ವಿವಾಹ ತಡೆಗೆ ಮುಂದಾಗಬೇಕು ಎಂದು ಹೇಳಿದರು. 

ಪ್ರಾಸ್ತಾವಿಕವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ. ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ಜಿಲ್ಲಾ ಮಟ್ಟದದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಸಹಿ ಅಭಿಯಾನ ಹಾಗೂ ಸೆಲ್ಫಿ ವಿಥ್ ಡಾಟರ್ ಕಾರ್ಯಕ್ರಮ ಮತ್ತು ಯೋಜನೆಯ ಲೋಗೊ, ಮಾಹಿತಿ ಕೈಪಿಡಿ ಮತ್ತು ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿದರು. ಭಾಗ್ಯಲಕ್ಷಿö್ಮÃ ಸುಕನ್ಯ ಸಮೃದ್ದಿ ಯೋಜನೆಯ ಫಲಾನುಭವಿಗೆ ಪಾಸ್ ಬುಕ್ ವಿತರಣೆ, ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ, ವಿವಿಧ ಸ್ಪರ್ಧೆ ವಿಜೇತರು ಹಾಗೂ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳಿಗೆ ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ತಾಲೂಕಿನ ವಿವಿಧ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.