ವಿವಿಗಳು ಉನ್ನತ ಶಿಕ್ಷಣವನ್ನು, ಜ್ಞಾನವನ್ನು ಯುವಕ-ಯುವತಿಯರಿಗೆ ಒದಗಿಸುವ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಮೂಡಿಸಬೇಕು
ಶಿಕ್ಷಣ ಅಂದರೆ ಕೇವಲ ಓದುಬರಹ ಕಲಿಯುವುದಲ್ಲ. ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಒಬ್ಬ ವ್ಯಕ್ತಿ ವಿವಿಯಿಂದ ಹೊರಗೆ ಬಂದ ಮೇಲೆ ಸಮಾಜದ ಜವಾಬ್ದಾರಿ ಹೊರುವ ಶಕ್ತಿ ಇರಬೇಕು. ಅಂತಹ ಜ್ಞಾನ ಬರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯ ಜೊತೆ ರಾಜಿ ಮಾಡಿಕೊಂಡು ಹೋಗುವುದಾದರೆ ಅದು ಶಿಕ್ಷಣವೇ ಅಲ್ಲ
ಬೆಂಗಳೂರು : ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ.
ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಈ ಸಮ ಸಮಾಜ ನಿರ್ಮಾಣ ಮಾಡುವ ಸಾಮರ್ಥ್ಯವನ್ನು ನಾವು ವಿವಿಗಳ ಮೂಲಕ ಕೊಡಬೇಕು ಎಂದರು.
ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು. ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ಕೆಲವು ವಿವಿಗಳಲ್ಲಿ ನೋಡಿದ್ದೇನೆ. ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ. ಯಾವುದೇ ಕಾರಣಕ್ಕೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು ಎಂದರು.
ಅತಿಥಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಇಂತಹ ವ್ಯಕ್ತಿಗಳನ್ನು ನೇಮಕ ಮಾಡಕೂಡದು.
ವಿವಿಯ ವಿದ್ಯಾರ್ಥಿಗಳು ಮನುಷ್ಯತ್ವ ಇರುವ ವ್ಯಕ್ತಿಗಳಾಗಿ ಬೆಳೆಯಬೇಕು. ಹುಟ್ಟುವಾಗ ಎಲ್ಲರೂ ವಿಶ್ವಮಾನವರು, ಬೆಳೆಯುತ್ತಾ ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದಂತೆ ಆಗಬಾರದು ಎಂದರು.
ಸಾಕಷ್ಟು ಕೊರತೆಗಳನ್ನು ಇಟ್ಟುಕೊಂಡು ಜಿಲ್ಲೆಗೊಂದು ವಿವಿ ಮಾಡುವ ತೀರ್ಮಾನ ಸರಿಯಲ್ಲ. ಮೂಲಸೌಲಭ್ಯ ಒದಗಿಸಲಾಗದಿದ್ದರೆ ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಶೇ. 3 ಕ್ಕಿಂತ ಹೆಚ್ಚು ಅನುದಾನ ಒದಗಿಸಲಾಗಿತ್ತು. ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು.
ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪವಾಗಬಾರದು. ಒಂದೇ ಬಾರಿ ಎಲ್ಲ ಪರಿಹಾರ ಒದಗಿಸಲಾಗದು. ಆದರೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ಸಂಶೋಧನೆಯ ಫಲ ಗ್ರಂಥಾಲಯಗಳಲ್ಲಿ ಉಳಿಯಬಾರದು. ಸಮಾಜವನ್ನು ತಲುಪಬೇಕು. ಆಗ ಮಾತ್ರ ಸಂಶೋಧನೆ ಫಲಪ್ರದವಾಗುವುದು ಎಂದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ , ಆರ್ಥಿಕ ಇಲಾಖೆ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಹಿರಿಯ ಅಧಿಕಾರಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.
No comments:
Post a Comment