Thursday, August 29, 2024

ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಗತ್ಯ : ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಗತ್ಯ. ಕ್ರೀಡೆ ಎನ್ನುವುದು ನಮ್ಮ ಪ್ರತಿನಿತ್ಯ ಜೀವನದ ಒಂದು ಭಾಗವಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ, ಹಾಗೂ ದೈಹಿಕ ಶಿಕ್ಷಣ ಅಧ್ಯಯನ ವಿಭಾಗ, ದೈಹಿಕ ಶಿಕ್ಷಣ ನಿರ್ದೇಶಕರು ಸಂಘ  ಮತ್ತು ವಿಜಯಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಇವುಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಮಹಿಳಾ ಕಬಡ್ಡಿ ವೈಭವ-2024’ ಅಂತಾರಾಜ್ಯ ಹೊನಲು ಬೆಳಕಿನ ಮಹಿಳಾ ಮುಕ್ತ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಎಲ್ಲರಿಗೂ ಕ್ರೀಡಾಶಕ್ತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ನೀವೆಲ್ಲರೂ ಭಾಗಿಯಾಗಿದ್ದು ಹೆಮ್ಮೆಯ ವಿಷಯ ಎಂದರು.


ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಕಬಡ್ಡಿ ಗ್ರಾಮೀಣ ಕ್ರೀಡೆ ಎಂದೇ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಈ ಪಂದ್ಯ ಮನೋಲ್ಲಾಸವನ್ನು ಹೆಚ್ಚಿಸುವ ಮೂಲಕ ದೈಹಿಕವಾಗಿ ನಮ್ಮನ್ನು ಸದೃಡರನ್ನಾಗಿಡುತ್ತದೆ. ನಿಮಗೆ ಇದೊಂದು ಒಳ್ಳೆಯ ಅವಕಾಶ. ಸೋಲು-ಗೆಲವು ಎಲ್ಲದರಲ್ಲೂ ಇರುತ್ತದೆ. ಭಾಗವಹಿಸುವುದು ಅತೀ ಮುಖ್ಯ. ನಿಮ್ಮೆಲ್ಲರಿಗೂ ಶುಭವಾಗಲಿ ಎಂದು ವಿದ್ಯಾರ್ಥಿನಿಯರಿಗೆ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಕ್ರೀಡೆಗಳು ವ್ಯಕ್ತಿಯ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವುದರ ಜೊತೆಗೆ, ಸಹಕಾರ ಮತ್ತು ಸಂಯಮದಂತಹ ಶ್ರೇಷ್ಠ ಮೌಲ್ಯಗಳನ್ನು ಬೆಳೆಸುತ್ತವೆ. ಕ್ರೀಡಾ ಸ್ಪರ್ಧೆಗಳು ಆಟಗಾರರಿಗೆ ಸೋಲು-ಗೆಲುವಿನ ಅನುಭವವನ್ನು ಕಲಿಸುತ್ತವೆ. ಇದರಿಂದ ಜೀವನದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಮತ್ತು ಸಹನೆ ಬೆಳೆಯುತ್ತದೆ. 

ಕ್ರೀಡೆಗಳಿಂದ ದೊರೆಯುವ ಶಿಸ್ತು, ಕಠಿಣ ಪರಿಶ್ರಮ, ಮತ್ತು ತಂಡದ ಆತ್ಮವಿಶ್ವಾಸವು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ. ಇದರಿಂದ ಕ್ರೀಡೆ ಕೇವಲ ವೈಯಕ್ತಿಕ ಬೆಳವಣ ಗೆಯಲ್ಲ, ಇಡೀ ಸಮುದಾಯದ ಸಮಗ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಭಾರತದ ಹಾಕಿ ದಂತಕಥೆ, ಮೇಜರ ಧ್ಯಾನಚಂದರವರ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಗಣ್ಯರು ಧ್ಯಾನಚಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ರಮೇಶ ಪಾಟೀಲ, ವಿವಿಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಶಿವಯೋಗಿ ಎಲಿ, ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ವಿವಿಧ ರಾಜ್ಯಗಳ ಕಬಡ್ಡಿ ತಂಡ, ನಗರದ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರು, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ನಾಡಗೀತೆ ಮತ್ತು ಮಹಿಳಾ ಗೀತೆ ಹಾಡಿದರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಸಕ್ಪಾಲ್ ಹೂವಣ್ಣ ಸ್ವಾಗತಿಸಿದರು. ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.