ವಿಜಯಪುರ: ಮೈಕ್ರೊ ಫೈನಾನ್ಸ್ ಹಾಗೂ ಚಿಟ್ ಫಂಡ್ಸ್ ಹಾವಳಿಗಳಿಂದ ಮಹಿಳೆಯರು ಅನುಭವಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ನಗರದ ಜಿಪಂ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಮಹಿಳಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಡ್ಯ ಜಿಲ್ಲೆಯಂತೆÉ ವಿಜಯಪುರ ಜಿಲ್ಲೆಯಲ್ಲಿಯೂ ಕೂಡ ಕೇಲವು ಫೈನಾನ್ಸ್ ಕಂಪನಿಗಳಿಂದ ತಡರಾತ್ರಿ ವರೆಗೂ ಮನೆಗೆ ಬಂದು ಕಂತು ತುಂಬಲು ಹಾಗೂ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿರುವ ಕುರಿತು ಇಲ್ಲಿಯ ಮಹಿಳೆಯರು ದೂರನ್ನು ನೀಡಿದ್ದು, ಈ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಎಲ್ಲ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.
ಕಳೆದ ಎರಡು ದಿನಗಳಿಂದ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗ, ಮಹಿಳೆಯರು ಮಲ, ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಕೆಲವು ಕಿಡಗೇಡಿಗಳು ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರುಗಳು ಬಂದಿದ್ದು, ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.
ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಗ್ರೂಪ್-ಡಿ ಮಹಿಳಾ ಸಿಬ್ಬಂದಿಗಳಿಗೆ ನಿಗದಿ ಪಡಿಸಿದ ವೇತನಕ್ಕೆ ಬದಲಾಗಿ ಅರ್ಧ ಸಂಬಳ ನೀಡುತ್ತಿದ್ದಾರೆ ಎಂದು ದೂರು ಬಂದಿದ್ದು ಇಂತಹ ದೂರುಗಳು ಇರುವ ಟೆಂಡರ್ ಪಡೆದಂತಹ ಏಜನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದರು.
ನರೇಗಾ ಯೋಜನೆಯಡಿ ಮಹಿಳೆಯರಿಗೆ ಉದ್ಯೋಗ ದೊರೆತ್ತಿಲ್ಲ ಎಂದು ದೂರು ಬಂದಿವೆ. ಶೇ.50 ರಷ್ಟು ಮಹಿಳೆಯರಿಗೆ ನರೇಗಾ ಅಡಿ ಉದ್ಯೋಗ ನೀಡುವ ವ್ಯವಸ್ಥೆ ಆಗಬೇಕು ಮತ್ತು ವೇತನವನ್ನು ಕೂಡ ಸರಿಯಾಗಿ ನೀಡದೆ ಸತಾಯಿಸುತ್ತಾರೆಂಬ ದೂರು ಇರುವುದರಿಂದ, ಸಂಬಂಧಿಸಿದ್ದ ಗ್ರಾಮ ಪಂಚಾಯಿತಿ ಅಧಿಕಾರಿ ಅಲ್ಲಿನ ಮಹಿಳೆಯರ ಸಮಸ್ಯೆ ನಿವಾರಿಸುವಂತೆ ಎಚ್ಚರಿಕೆ ನೀಡಿದರು.
ಗ್ರಾಮಗಳಲ್ಲಿನ ಕೆಲವು ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿರುವುದಾಗಿ ಮಹಿಳೆಯರಿಂದ ದೂರುಗಳು ಬಂದಿವೆ. ಕಿರಾಣಿ ಅಂಗಡಿಗಳಲ್ಲಿ ಸುಲಭವಾಗಿ ಸಾರಾಯಿ ದೊರೆಯುವುದರಿಂದ ಗಂಡಂದಿರು ಕುಡಿದು ಬಂದು ಮಹಿಳೆಯರಿಗೆ ತೊಂದರೆ ಕೊಡುತ್ತಾರೆ ಎಂದು ಸಾಕಷ್ಟು ಮಹಿಳೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಕೇವಲ ಪ್ರಾಥಮಿಕ ಶಾಲೆಗಳಿರುವುದರಿಂದ ಮುಂದಿನ ವಿದ್ಯಾಭ್ಯಾಸಕ್ಕೆ ನಗರ ಪ್ರದೇಶಗಳಿಗೆ ತಮ್ಮ ಹೆಣ್ಣು ಮಕ್ಕಳನ್ನು ಕಳುಹಿಸಲು ಹೆಚ್ಚಿನ ತಾಯಂದಿರು ಹಿಂದೇಟು ಹಾಕುತ್ತಿದ್ದಾರೆ. ಪ್ರೌಢ ಹಾಗೂ ಕಾಲೇಜು ಶಿಕ್ಷಣಗಳನ್ನು ಗ್ರಾಮಗಳಲ್ಲಿಯೇ ನೀಡಲು ವ್ಯವಸ್ಥೆ ಮಾಡಿದಲ್ಲಿ ಬಾಲ್ಯ ವಿವಾಹ ಕಡಿಮೆಯಾಗಿ ಬಾಲಕಿಯರಿಗೆ ಉನ್ನತ ಶಿಕ್ಷಣ ಪಡೆದುಕೊಳ್ಳಲು ಸಹಾಯವಾಗುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಳ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ, ಜಿಲ್ಲಾ ಪಂಚಾಯಿತಿ ಯೋಜಾನಾ ನಿರ್ದೇಶಕ ಬಿ.ಎಸ್. ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸಿ.ಕೆ. ಚವ್ಹಾಣ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.