Tuesday, March 17, 2026

ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು ಮಾ.೧೮ ರಿಂದ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ವಿಜಯಪುರ  : ಜಿಲ್ಲೆಯಾದ್ಯಂತ ಒಟ್ಟು ೧೩೭ ಪರೀಕ್ಷಾ ಕೇಂದ್ರಗಳಲ್ಲಿ ಇದೇ ಮಾರ್ಚ್ ೧೮ ರಿಂದ ಎಸ್ ಎಸ್ ಎಲ್‌ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು  ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. 

ಏಪ್ರಿಲ್ ೨ ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು  ಜಿಲ್ಲೆಯ ೭ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ  ನೋಡಲ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಆನಂದ ಕೆ. ಅವರು ತಿಳಿಸಿದ್ದಾರೆ. 

ತಾಲೂಕುವಾರು ಮಾರ್ಗಗಳನ್ನು ನಿಗದಿಪಡಿಸಿ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳ ಮೂಲಕ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯಲ್ಲಿ, ಸುರಕ್ಷಿತವಾಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತಲುಪಿಸುವ  ವ್ಯವಸ್ಥೆಯನ್ನು ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಮಾರ್ಗಸೂಚಿ ಅಧಿಸೂಚನೆಯಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ವೆಬ್ ಕಾಸ್ಟಿಂಗ್ ವ್ಯವಸ್ಥೆ :ಪರೀಕ್ಷೆಯನ್ನು ನಕಲು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾ ಮಟ್ಟದಲ್ಲಿ ಒಟ್ಟು ೧೩೭ ಪರೀಕ್ಷಾ ಕೇಂದ್ರಗಳ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಪ್ರತಿಯೊಂದು ಕೊಠಡಿಯನ್ನು ಒಂದು ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೀಕ್ಷಕರಂತೆ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬಿಗಿ ಪೋಲಿಸ್ ಬಂದೊಬಸ್ತ್: ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಪ್ರಶ್ನೆ ಪತ್ರಿಕೆ ಸಾಗಾಣಿಕೆಗೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳ ನೇತೃತ್ವದಲ್ಲಿ ಮಾಡಲಾಗಿದೆ. ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಮೊಬೈಲ್ ನಿಷೇಧಿಸಲಾಗಿದೆ. ಅಲ್ಲದೇ, ಪರೀಕ್ಷಾ ಕೇಂದ್ರದ ೨೦೦ ಮಿ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನ ಬೆಳಿಗ್ಗೆ ೮.೩೦ ರಿಂದ ಪರೀಕ್ಷೆ ಮುಕ್ತಾಯದವರೆಗೆ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರದ ೨೦೦ ಮೀ.  ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು, ಕೊಚಿಂಗ್ ಸೆಂಟರ್‌ಗಳನ್ನು ಪರೀಕ್ಷೆ ಮುಗಿಯುವವರೆಗೆ ಮುಚ್ವುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಭಯ ಮುಕ್ತರಾಗಿ ಧೈರ್ಯದಿಂದ ಪರೀಕ್ಷೆಯನ್ನು ಬರೆಯಬಹುದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ  ವೀರಯ್ಯ ಸಾಲಿಮಠ ಹಾಗೂ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಟಿ. ಎಸ್. ಕೊಲಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.




No comments:

Post a Comment