ವಿಜಯಪುರ : ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಲಜೀವನ್ ಮಿಷನ್ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅ.5ರಂದು ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಘಟಕಾಂಶಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಟಾಸ್ಕ್ಫೋರ್ಸ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನಗತ್ಯವಾಗಿ ಹೊಸ ಕೊಳವೆಬಾವಿಗಳನ್ನು ಕೊರೆಯಿಸುವುದನ್ನು ಕಡಿಮೆ ಮಾಡಿ, ಈಗಾಗಲೇ ಕೊರೆಯಿಸಿರುವ ಕೊಳವೆಬಾವಿಗಳಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಗ್ರಾಮಸ್ಥರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯದಿಂದ ಪ್ರತಿ ವಾರ ಸಭೆ ನಡೆಸಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಅಂತಹ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಜಿಲ್ಲಾ ಪಂಚಾಯತಿಗೆ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.
841 ಜಲಜೀವನ್ ಮಿಷನ್ ಕಾಮಗಾರಿಗಳು ಪೂರ್ಣ : ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಒಟ್ಟು 1,000 ಕಾಮಗಾರಿಗಳ ಪೈಕಿ 841 ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ವೇಗಗೊಳಿಸಿ, ಡಿಸೆಂಬರ್ 2026ರ ಅಂತ್ಯದೊಳಗೆ ಭೌತಿಕವಾಗಿ ಪೂರ್ಣಗೊಳಿಸಬೇಕು ಎಂದು ಆನಂದ್ ಪ್ರಕಾಶ್ ಮೀನಾ ಸೂಚಿಸಿದರು.
ಜಿಲ್ಲೆಯ ಒಟ್ಟು 654 ಗ್ರಾಮಗಳ ಪೈಕಿ 379 ಗ್ರಾಮಗಳು ಮಾತ್ರ ‘ಹರ್ ಘರ್ ಜಲ್’ ಆಪ್‌ನಲ್ಲಿ ಪ್ರಮಾಣೀಕರಿಸಲ್ಪಟ್ಟಿವೆ. ಬಾಕಿ ಇರುವ 275 ಗ್ರಾಮಗಳ ಪ್ರಮಾಣೀಕರಣ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಗ್ರಾಮಗಳ ‘ಹರ್ ಘರ್ ಜಲ್’ ಪ್ರಮಾಣೀಕರಣವನ್ನು ಡಿಸೆಂಬರ್ 2026ರ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಸಹಾಯಕ ಹಾಗೂ ಕಿರಿಯ ಅಭಿಯಂತರರಿಗೆ ಸೂಚಿಸಿದರು.
4.16 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಒಟ್ಟು 4.64 ಲಕ್ಷ ಮನೆಗಳ ಪೈಕಿ ಈಗಾಗಲೇ 4.16 ಲಕ್ಷ ಮನೆಗಳಿಗೆ ಜಲಜೀವನ್ ಮಿಷನ್ ಅಡಿಯಲ್ಲಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಲಾಗಿದೆ. ಬಾಕಿ ಉಳಿದಿರುವ ಮನೆಗಳಿಗೂ ಡಿಸೆಂಬರ್ 2026ರೊಳಗೆ ಕಡ್ಡಾಯವಾಗಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಳ ಸಂಪರ್ಕ ಕಲ್ಪಿಸಿರುವ ಕುರಿತು ಸಭೆಯಲ್ಲಿ ಪರಿಶೀಲಿಸಲಾಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ಎಲ್ಲ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ನಳ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಭೆಗೆ ತಿಳಿಸಿದರು. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು, ಇನ್ನೂ ಕೆಲವು ಶಾಲೆಗಳಿಗೆ ನಳ ಸಂಪರ್ಕ ಕಲ್ಪಿಸುವುದು ಬಾಕಿ ಇದೆ ಎಂದು ಸಭೆಯ ಗಮನಕ್ಕೆ ತಂದರು. ಬಾಕಿ ಇರುವ ಶಾಲೆಗಳ ಪಟ್ಟಿಯನ್ನು ತಕ್ಷಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಲ್ಲಿಸಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಜಲಧಾರೆ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ
ಸಭೆಯಲ್ಲಿ ಜಲಧಾರೆ ಯೋಜನೆಯ ಸ್ಕೀಮ್-1 ಮತ್ತು ಸ್ಕೀಮ್-2ರ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಸ್ಕೀಮ್-1ರ ಕಾಮಗಾರಿಗಳು ಶೇ.86ರಷ್ಟು ಪ್ರಗತಿ ಸಾಧಿಸಿದ್ದು, ಡಿಸೆಂಬರ್ 2026ರೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಮಾರ್ಚ್ 2027ರೊಳಗೆ ಪ್ರಾಯೋಗಿಕ ಚಾಲನಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದರು. ಸ್ಕೀಮ್-1ರಡಿ 53 ಓವರ್‌ಹೆಡ್ ಟ್ಯಾಂಕ್‌ಗಳಿಗೆ (ಔಊಖಿ) ಅಗತ್ಯವಿರುವ ಜಾಗವನ್ನು ಕೂಡಲೇ ಖರೀದಿಸಿ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಗ್ಯಾಪ್–ಕ್ಲೋಸರ್ ಕಾಮಗಾರಿಗಳನ್ನೂ ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಸ್ಕೀಮ್ 2ರ ಕಾಮಗಾರಿಗಳು ಶೇ.75ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. 39 ಓವರ್‌ಹೆಡ್ ಟ್ಯಾಂಕ್‌ಗಳಿಗೆ ಅಗತ್ಯವಿರುವ ಜಾಗವನ್ನು ಕೂಡಲೇ ಖರೀದಿಸಿ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಗ್ಯಾಪ್–ಕ್ಲೋಸರ್ ಕಾಮಗಾರಿಗಳಿಗೂ ಆದ್ಯತೆ ನೀಡುವಂತೆ ತಿಳಿಸಿದರು.
ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಪ್ರಮಾಣದ ಕಾರ್ಮಿಕರನ್ನು ನಿಯೋಜಿಸಿ ಕಾಮಗಾರಿಯ ವೇಗ ಹೆಚ್ಚಿಸಬೇಕು. ಸಂಬAಧಪಟ್ಟ ಗುತ್ತಿಗೆದಾರರು ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಮನ್ವಯ ಸಾಧಿಸಿ ಅಗತ್ಯ ಕಾರ್ಯಯೋಜನೆ ರೂಪಿಸಿಕೊಂಡು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ನೀರಿನ ಮಾದರಿಗಳ ಪರಿಶೀಲನಾ ಪ್ರಕ್ರಿಯೆಯನ್ನು ತ್ರೈಮಾಸಿಕ ಗುರಿಯನ್ವಯ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವರ್ಧಮಾನ ಗೊಂಗಡಿ, ಇಲಾಖೆಯ ವಿವಿಧ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜಲಧಾರೆ ಯೋಜನೆಯ ಪಿಎಂಸಿ ತಂಡದ ನಾಯಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment