Friday, November 13, 2026

14-11-2026 EE DIVASA KANNADA DAILY NEWS PAPER

ಎಂ.ಸಿ. ಮುಲ್ಲಾಗೆ ಸಹಕಾರ ರತ್ನ ಪ್ರಶಸ್ತಿ


ವಿಜಯಪುರ : ಕರ್ನಾಟಕ ರಾಜ್ಯ ಸಹಕಾರ ಚಳವಳಿಯ ಬೆಳವಣಿಗೆಗೆ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ, ವಿಜಯಪುರ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಂ.ಸಿ. ಮುಲ್ಲಾ ಅವರಿಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ನ.14ರಂದು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಬಡಾವಣೆಯ 1ನೇ ಬ್ಲಾಕ್‌ನ ಎತ್ತಿನಬಸವಣ್ಣ ವೃತ್ತದ ಸಮೀಪದ 100 ಅಡಿ ರಸ್ತೆಯ ನಂ.3ರಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಎಂ.ಸಿ. ಮುಲ್ಲಾ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಈ ಕುರಿತು ಅಧಿಕೃತ ಆಹ್ವಾನ ಪತ್ರ ರವಾನಿಸಿದ್ದು, ಸಮಾರಂಭಕ್ಕೆ ತಪ್ಪದೇ ಆಗಮಿಸಿ ಪ್ರಶಸ್ತಿ ಸ್ವೀಕರಿಸುವಂತೆ ಕೋರಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಮುಲ್ಲಾ ಅವರು ಸಲ್ಲಿಸಿರುವ ಸೇವೆಗೆ ರಾಜ್ಯಮಟ್ಟದ ಮನ್ನಣೆ ದೊರೆತಿರುವುದು ಸಹಕಾರ ವಲಯದಲ್ಲಿ ಸಂತಸ ಮೂಡಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕೆಪಿಎಸ್‌ಸಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಬಿಗಿ ಪೊಲೀಸ್ ಭದ್ರತೆ-ಸಿಸಿಟಿವಿ ನಿಗಾ 20 ಪರೀಕ್ಷಾ ಕೇಂದ್ರಗಳಲ್ಲಿ 8,117 ಅಭ್ಯರ್ಥಿಗಳು; ಪ್ರಶ್ನೆಪತ್ರಿಕೆ ಸಾಗಾಟಕ್ಕೆ 8 ಮಾರ್ಗ ನೇರ ವೆಬ್‌ಕಾಸ್ಟಿಂಗ್ ವ್ಯವಸ್ಥೆ


ವಿಜಯಪುರ : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ನವೆಂಬರ್ 15ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್. ಕೆ. ತಿಳಿಸಿದರು.

 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ 8,117 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಕೆಪಿಎಸ್‌ಸಿ ನಿಗದಿಪಡಿಸಿರುವ ಪರೀಕ್ಷಾ ಮಾರ್ಗಸೂಚಿಯಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇರಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಎಂಟು ಮಾರ್ಗಗಳನ್ನು ಗುರುತಿಸಲಾಗಿದೆ.

 ಪ್ರತಿ ಮಾರ್ಗಕ್ಕೂ ಮಾರ್ಗಾಧಿಕಾರಿಗಳನ್ನು ನೇಮಿಸಿ ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸಲಾಗುವುದು. ಪರೀಕ್ಷೆ ಆರಂಭವಾಗುವ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಎಲ್ಲ ಕೇಂದ್ರಗಳಿಗೂ ಪ್ರಶ್ನೆಪತ್ರಿಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

 ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರು, ವೀಕ್ಷಕರು ಹಾಗೂ ಪ್ರಶ್ನೆಪತ್ರಿಕೆಗಳ ಉಸ್ತುವಾರಿಗಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಇವರ ಸಮ್ಮುಖದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಪ್ರಶ್ನೆಪತ್ರಿಕೆ ತೆರೆಯುವ ಭದ್ರತಾ ಕೊಠಡಿಯಲ್ಲಿಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕೇಂದ್ರಗಳ ದೃಶ್ಯಾವಳಿಗಳನ್ನು ನೇರ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿರುವ ಕೇಂದ್ರದಿAದ ಮೇಲ್ವಿಚಾರಣೆ ಮಾಡಲಾಗುವುದು. ಪ್ರತಿ ನಾಲ್ಕು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ. ಗುರುವಾರ ಸಂಜೆ ನಡೆಸಿದ ಪ್ರಾಯೋಗಿಕ ಪರಿಶೀಲನೆಯಲ್ಲಿ ಎಲ್ಲ ಕೇಂದ್ರಗಳ ನೇರ ದೃಶ್ಯಾವಳಿಗಳು ಲಭ್ಯವಾಗಿರುವುದು ಖಚಿತವಾಗಿದೆ ಎಂದು ತಿಳಿಸಿದರು.

 ಅಭ್ಯರ್ಥಿಗಳ ತಪಾಸಣೆಗಾಗಿ ಪ್ರತಿ ಕೇಂದ್ರದಲ್ಲಿ ಪ್ರತ್ಯೇಕ ತಂಡ ಹಾಗೂ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ತಪಾಸಣೆ ಬಳಿಕ ಮುಖ ಗುರುತಿಸುವ ವ್ಯವಸ್ಥೆಯ ಮೂಲಕ ಅಭ್ಯರ್ಥಿಗಳ ಹಾಜರಾತಿ ದೃಢಪಡಿಸಲಾಗುತ್ತದೆ. ಪರೀಕ್ಷಾ ಪ್ರವೇಶ ಪತ್ರ, ಗುರುತಿನ ಚೀಟಿ ಮತ್ತು ಪೆನ್ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯಲು ಅವಕಾಶವಿರುವುದಿಲ್ಲ. ಬ್ಯಾಗ್, ಮೊಬೈಲ್, ಪುಸ್ತಕ ಸೇರಿದಂತೆ ಇತರೆ ವಸ್ತುಗಳನ್ನು ಪ್ರಿಸ್ಕಿಂಗ್ ತಪಾಸಣಾ ಸ್ಥಳದ ಹೊರಗಡೆಯೇ ಇರಿಸಬೇಕು. ಪ್ರಿಸ್ಕಿಂಗ್ ನಂತರ ಯಾವುದೇ ವಸ್ತುಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

 ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರನ್ನು ನಿಯೋಜಿಸಲಾಗಿದ್ದು, ಒಬ್ಬರು ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ವಿತರಣೆ ಹಾಗೂ ಸಂಗ್ರಹಣೆ ಕಾರ್ಯ ನಿರ್ವಹಿಸಲಿದ್ದಾರೆ. ಮತ್ತೊಬ್ಬರು ಕೊಠಡಿಯೊಳಗೆ ಮತ್ತೊಮ್ಮೆ ತಪಾಸಣೆ ನಡೆಸಿ, ಜಾಮರ್ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳುವರು. ಪ್ರತಿ ಕೊಠಡಿಯಲ್ಲಿ ಜಾಮರ್ ಅಳವಡಿಸಲಾಗಿದ್ದು,ಅವುಗಳ ಕಾರ್ಯನಿರ್ವಹಣೆ ಪರಿಶೀಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

 ಒಎಂಆರ್ ಉತ್ತರ ಪತ್ರಿಕೆಯಲ್ಲಿ ಐದನೇ ಆಯ್ಕೆಯಾಗಿ ಉತ್ತರ ಗೊತ್ತಿಲ್ಲ ಎಂಬ ಶೇಡ್ ಪರಿಚಯಿಸಲಾಗಿದೆ. ಅಭ್ಯರ್ಥಿಗಳು ಉತ್ತರ ತಿಳಿದಿಲ್ಲದ ಪ್ರಶ್ನೆಗಳಿಗೆ ಈ ಆಯ್ಕೆಯನ್ನು ಗುರುತಿಸಬಹುದಾಗಿದೆ. ಪರೀಕ್ಷೆ ಮುಗಿದ ಬಳಿಕ ಇದಕ್ಕಾಗಿ ಐದು ನಿಮಿಷ ಹೆಚ್ಚುವರಿ ಸಮಯ ನೀಡಲಾಗುತ್ತದೆ. ಒಎಂಆರ್ ಹಾಳೆಯ ಮೂರು ಪ್ರತಿಗಳ ವ್ಯವಸ್ಥೆ ಮಾಡಲಾಗಿದ್ದು, ಮೂಲ ಪ್ರತಿಯನ್ನು ತಕ್ಷಣವೇ ಸ್ಕ್ಯಾನ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

 ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡು ಅಧಿವೇಶನಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ಅಧಿವೇಶನದ ಒಎಂಆರ್ ಹಾಳೆಗಳನ್ನು ಜಿಲ್ಲಾ ಪಂಚಾಯಿತಿ ಕಚೇರಿಯ ಸ್ಕ್ಯಾನಿಂಗ್ ಕೇಂದ್ರದಲ್ಲಿ ಸ್ಕ್ಯಾನ್ ಮಾಡಿ, ವೆಬ್ ಸೈಟ್ ಕೆಪಿಎಸ್ಸಿ ಮೂಲಕ ಪ್ರಕಟಿಸಲಾಗುವುದು ಎಂದರು.

 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಸೈಬರ್ ಕೆಫೆ ಹಾಗೂ ಜೆರಾಕ್ಸ್ ಅಂಗಡಿ,ಕೋಚಿAಗ್ ಸೆಂಟರ್ ತೆರೆಯದಂತೆ ಸೂಚಿಸಲಾಗಿದೆ. ಪರೀಕ್ಷೆಗೆ ನಿಯೋಜಿತ ಅಧಿಕಾರಿ,ಸಿಬ್ಬಂದಿಗೆ ಈಗಾಗಲೇ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದ್ದು, ಬೆಂಗಳೂರಿನಲ್ಲಿ ತರಬೇತಿ ಪಡೆದ ಇಬ್ಬರು ಮಾಸ್ಟರ್ ತರಬೇತುದಾರರು ಜಿಲ್ಲಾಮಟ್ಟದ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ. ಈಗಾಗಲೇ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಹೇಳಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪರೀಕ್ಷೆ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸಾಗಾಟಕ್ಕೆ ಪೊಲೀಸ್ ಬೆಂಗಾವಲು ಹಾಗೂ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಆವರಣದೊಳಗೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶವಿರುವುದಿಲ್ಲ. ಮೊದಲ ಅಧಿವೇಶನದ ಪರೀಕ್ಷೆ ಮುಗಿದ ತಕ್ಷಣ ಅಭ್ಯರ್ಥಿಗಳು ಕೇಂದ್ರದ ಆವರಣದಿಂದ ಹೊರಗೆ ತೆರಳಬೇಕು. ಎರಡನೇ ಅಧಿವೇಶನಕ್ಕೆ ಬರುವ ಅಭ್ಯರ್ಥಿಗಳಿಗೆ ಹೊಸದಾಗಿ ಪ್ರಿಸ್ಕಿಂಗ್ ಮತ್ತು ಮುಖ ಗುರುತಿಸುವಿಕೆ ಪ್ರಕ್ರಿಯೆ ನಡೆಸಲಾಗುತ್ತದೆ. 

 ಧಾರ್ಮಿಕ ಉಡುಪು ಧರಿಸಿ ಬರುವ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಎರಡೂವರೆ ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಹಾಜರಾಗಬೇಕು. ಅವರ ತಪಾಸಣೆಗಾಗಿ ಪ್ರತ್ಯೇಕ ಉಡುಪು ಪರಿಶೀಲನಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಆರೋಗ್ಯ ಇಲಾಖೆಯ ವತಿಯಿಂದ ಇಎನ್ ಟಿ ತಜ್ಞರನ್ನು ಪ್ರತಿ ಕೇಂದ್ರದಲ್ಲಿಯೂ ನಿಯೋಜಿಸಲಾಗಿದೆ. ವದಂತಿ ಹಾಗೂ ನಕಲಿ ಸುದ್ದಿಗಳ ಹರಡುವಿಕೆಯನ್ನು ತಡೆಯಲು ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ತಂಡಗಳು ಹದ್ದಿನ ಕಣ್ಣಿರಿಸಿವೆ. ವಾಟ್ಸ್ ಆ್ಯಪ್, ಟೆಲಿಗ್ರಾಂ, ಫೇಸ್‌ಬುಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗೆ ಸಂಬAಧಿಸಿದ ಅಧಿಕೃತ ಮಾಹಿತಿಗಾಗಿ ಕೆಪಿಎಸ್‌ಸಿ ಜಾಲತಾಣ ಮೂಲಕ ತಿಳಿಸಲಾಗುತ್ತದೆ ಎಂದರು.

 ಪರೀಕ್ಷಾ ಸಿದ್ಧತೆ ಹಿನ್ನೆಲೆಯಲ್ಲಿ ವಸತಿ ನಿಲಯಗಳು, ವಸತಿಗೃಹಗಳು, ತರಬೇತಿ ಕೇಂದ್ರಗಳು, ಗ್ರಂಥಾಲಯಗಳು ಹಾಗೂ ಪಿಜಿಗಳ ನಿರ್ವಹಣೆದಾರರ ಸಭೆ ನಡೆಸಿ ಅಗತ್ಯ ಸೂಚನೆ ನೀಡಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ಅಕ್ರಮ ಕಂಡುಬAದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಅಭ್ಯರ್ಥಿಗಳು ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಅವರು ಹೇಳಿದರು.

 ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.